ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​ಗಳು ಪತ್ತೆ: ತನಿಖೆಗೆ ಸೂಚಿಸಿದ ಸ್ಪೀಕರ್ ಖಾದರ್


 

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​ಗಳು ಪತ್ತೆ: ತನಿಖೆಗೆ ಸೂಚಿಸಿದ ಸ್ಪೀಕರ್ ಖಾದರ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದು ಕಂಡುಬಂದಿದ್ದು, ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ಅವರು ತನಿಖೆಗೆ ಸೂಚಿಸಿದ್ದಾರೆ.
ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ನೀಡಿದ ಮಾಹಿತಿ ಮೇರೆಗೆ ಅಧ್ಯಕ್ಷರು ಹಾಗೂ ಸಾರ್ವಜನಿಕರು ಸೇರಿ ಪತ್ತೆಯಾಗಿರುವ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಈ ಕುರಿತು ಸ್ಥಳೀಯ ಶಾಸಕರಾದ ತನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ, ಪತ್ತೆ ಹಚ್ಚಿ, ತಮ್ಮ ಇಲಾಖೆ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಅಂಚೆ ವಿಭಾಗದವರು ಏನಂತಾರೆ?ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ನಾಳೆ(ಗುರುವಾರ) ಅಂಚೆ ಇಲಾಖೆಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಬಳಿಕ ನಿರ್ಧರಿಸಲಾಗುವುದು ಎಂದು ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ತಿಳಿಸಿದ್ದಾರೆ

ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳು ರಾಶಿ ರಾಶಿಯಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಸ್ಥಳೀಯರು ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್‌ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ಬಳಿಕ ಹಲವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪುದು ಗ್ರಾಮದ ಅನೇಕ ಮನೆಗಳ ವಿಳಾಸ ಹೊಂದಿರುವ ಕಾರ್ಡ್‌ಗಳು ನದಿ ಬದಿಯಲ್ಲಿ ಚದುರಿಕೊಂಡಿರುವುದು ಕಂಡುಬಂದಿದೆ

ಈ ಕುರಿತು ಪ್ರತಿಕ್ರಿಯಿಸಿದ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಗ್ರಾಮಸ್ಥರಿಗೆ ಆಧಾರ್ ಕಾರ್ಡ್ ತಲುಪದೆ, ಸಾರ್ವಜನಿಕರು ಹಣ ನೀಡಿ ಸೈಬರ್ ಕೇಂದ್ರಗಳಿಂದ ಪ್ರತಿಗಳನ್ನು ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸಾವಿರಾರು ಕಾರ್ಡ್‌ಗಳು ನದಿ ತೀರದಲ್ಲಿ ಪತ್ತೆಯಾಗಿರುವುದು ಗಂಭೀರ ವಿಷಯವಾಗಿದ್ದು, ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ಸ್ಥಳೀಯ ಶಾಸಕರಿಗೂ ಗ್ರಾಮ ಪಂಚಾಯತ್ ವತಿಯಿಂದ ದೂರು ಸಲ್ಲಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಾರ್ವಜನಿಕರೊಂದಿಗೆ ಅಂಚೆ ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು. ಘಟನೆ ಕುರಿತು ಸಂಬಂಧಪಟ್ಟ ಇಲಾಖೆ ತಕ್ಷಣ ತನಿಖೆ ಆರಂಭಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ಕೊಟ್ಟೂರು ತಾಲ್ಲೂಕಿನ ಕೋಗಲಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ