BIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು ಜಮೀರ್ ಅಹ್ಮದ್ ಆಡಿಯೋ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ? ಸ್ಪಷ್ಟನೆ ನೀಡಿದ ‘ಕೈ’ ನಾಯಕ
ಬೆಂಗಳೂರು: ದಾವಣಗೆರೆ ಉಪಚುನಾವಣೆ ವೇಳೆ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಭಾರಿ ವೈರಲ್ ಆಗಿದ್ದು, ರಾಜ್ಯ ಕಾಂಗ್ರೆಸ್ ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಜಮೀರ್ ಅಹ್ಮದ್ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಲಾಗಿದೆ. ಮುಸ್ಲಿಂ ವೋಟಿಂಗ್ ಕಡಿಮೆ ಇದೆ ಹೊರಗಡೆ ಬಂದ್ರೆ ಅವರನ್ನ ನಂಬೋಕಾಗಲ್ಲ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ. ಒತ್ತಾಯ ಮಾಡಿ ಮನೆಯಿಂದ ಕರ್ಕೊಂಡು ಬರಬೇಡಿ. ಪಕ್ಷೇತರರಿಗೆ ಎಸ್‌ಡಿಪಿಐಗೆ ವೋಟ್ ಹಾಕಲಿ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ ಎನ್ನಲಾಗಿದೆ.
ಈ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದ್ದಂತೆಯೇ ಸ್ವತಃ ಜಮೀರ್ ಅಹಮ್ಮದ್ ಖಾನ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದು, ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ. ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ. ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದ್ದು, ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.
ಆಡಿಯೋ ವೈರಲ್ ಬೆನ್ನಲ್ಲೇ ಜಮೀರ್ ಅಹ್ಮದ್ ಹಾಗೂ ನಜೀರ್ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Comments
Post a Comment