ದಾವಣಗೆರೆ: ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ವಿವಾದ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಖ್ಯ ಶಿಕ್ಷಕ ಜಯಪ್ಪ
ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಯಪ್ಪ (55) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಾಲೆಯ ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ನಿರಂತರ ಭಿನ್ನಾಭಿಪ್ರಾಯ ಮತ್ತು ವಿವಾದದಿಂದ ಮನನೊಂದು ಅವರು ಈ ನಿರ್ಧಾರ ಕೈಗೊಂಡಿದ್ದರು.
ಘಟನೆಯ ಹಿನ್ನೆಲೆ
ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮುಖ್ಯ ಶಿಕ್ಷಕ ಜಯಪ್ಪ, ಸಹಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ನಡುವೆ ಕೆಲಸದ ವಿಚಾರವಾಗಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಈ ಸಮಸ್ಯೆಯನ್ನು ಬಗೆಹರಿಸಲು ಸೋಮವಾರ ಶಾಲಾಭಿವೃದ್ಧಿ ಸಮಿತಿ (SDMC) ಸದಸ್ಯರು ಮತ್ತು ಗ್ರಾಮದ ಮುಖಂಡರ ನೇತೃತ್ವದಲ್ಲಿ ರಾಜೀ ಸಂಧಾನ ಸಭೆ ನಡೆಸಲಾಗಿತ್ತು.
ಆದರೆ, ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯದ ಹಿನ್ನೆಲೆಯಲ್ಲಿ, ಮಂಗಳವಾರ ಮತ್ತೊಮ್ಮೆ ಬಿಆರ್‌ಸಿ (BRC) ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಮಾನಸಿಕವಾಗಿ ನೊಂದಿದ್ದ ಮುಖ್ಯ ಶಿಕ್ಷಕ ಜಯಪ್ಪ ಅವರು ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ
ವಿಷ ಸೇವಿಸಿ ಅಸ್ವಸ್ಥರಾಗಿದ್ದ ಜಯಪ್ಪ ಅವರನ್ನು ಸ್ಥಳೀಯರು ಮತ್ತು ಶಿಕ್ಷಕರು ತಕ್ಷಣವೇ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ಜಯಪ್ಪ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯು ಆ ಭಾಗದ ಶಿಕ್ಷಣ ವಲಯದಲ್ಲಿ ತೀವ್ರ ಆಘಾತವನ್ನುಂಟು ಮಾಡಿದ್ದು, ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments
Post a Comment